Home ANKOLA ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮು ಗೌಡ ಇನ್ನಿಲ್ಲ : ಶಾಶ್ವತವಾಗಿ ಹಾಡು ನಿಲ್ಲಿಸಿದ ಸುಕ್ರಜ್ಜಿ.

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮು ಗೌಡ ಇನ್ನಿಲ್ಲ : ಶಾಶ್ವತವಾಗಿ ಹಾಡು ನಿಲ್ಲಿಸಿದ ಸುಕ್ರಜ್ಜಿ.

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 88 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದಲ್ಲಿ ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರು ಸಾರಾಯಿ ವಿರೋಧ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು.
ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಪಾಲ್ಗೊಂಡಿದ್ದರು.ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಅವರು ಭಾಜನರಾಗಿದ್ದರು. ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ಮುಂದಾಗಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ಸಂತಾಪ :

ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮ ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿ, ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.

ಸಂಸದ ಕಾಗೇರಿ ಸಂತಾಪ :

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಗಾಯಕಿ ಹೋರಾಟಗಾರ್ತಿ ಸುಕ್ರಿ ಬೊಮ್ಮ ಗೌಡ ಅವರು ನಿಧನರಾದ ಸುದ್ದಿ ಕೇಳಿ ಅಘಾತವಾಯಿತು. ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು ಮತ್ತು ಮಧ್ಯ ಮಾರಾಟ ಹಾವಳಿ ಹೆಚ್ಚಿದ್ದರಿಂದ ಅದನ್ನು ತಡೆಯಲು ಹಲವು ದಶಕಗಳ ಹಿಂದೆ ಸಾರಾಯಿ ವಿರೋಧಿ ಜನಾಂದೋಲನ ಸಹ ನಡೆಸಿದ್ದರು. ಭಾರತ ಸರ್ಕಾರದಿಂದ ಕೊಡಮಾಡುವ “ಪದ್ಮಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಸುಕ್ರಿ ಗೌಡ ಅವರ ಅಗಲುವಿಕೆಯಿಂದ ಜನಪದ ಸಂಸ್ಕೃತಿ ಸಂರಕ್ಷಕಿಯಾಗಿದ್ದ, ಅದಮ್ಯ ಚೇತನವನ್ನು ನಾಡು ಕಳೆದುಕೊಂಡಂತಾಗಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ಸೂಚಿಸಿದ್ದಾರೆ.