ಬೆಂಗಳೂರು: ಕಲ್ಲಿದ್ದಲು ಹಗರಣದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಿಟ್ ಅಂಡ್ ರನ್ ಆರೋಪ ಮಾಡುತ್ತಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ತೆರನಾದ ತನಿಖೆಗೂ ನಾವು ಸಿದ್ಧ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕಲ್ಲಿದ್ದಲು ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ, ಸುಮಾರು 418 ಕೋಟಿ ರೂಪಾಯಿ ಹಗಲು ದರೋಡೆ ನಡೆಸಿದ್ದಾರೆ ಎಂದು ಯಡಿಯೂರಪ್ಪ ಶನಿವಾರ ಆರೋಪಿಸಿದ್ದರು. ಇದರ ಬೆನ್ನಲ್ಲೇ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗಳೂರಿನಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.
ಯಡಿಯೂರಪ್ಪ ಅವರು ಆರೋಪಿಸಿದಂತೆ ಯಾವುದೇ ರೀತಿಯ ಹಗರಣ ನಡೆದಿಲ್ಲ. ಕಲ್ಲಿದ್ದಲು ಹಗರಣ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಆರೋಪದ ಬಗ್ಗೆ ಯಾವುದೇ ಮಾಧ್ಯಮದಲ್ಲೂ ಬಹಿರಂಗ ಚರ್ಚೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಾವು ಈ ಕ್ರಮ ತೆಗೆದುಕೊಂಡಿದ್ದೇವೆ ಎಂದರು.